ಬೆಳಗಾವಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಆಯ್ಕೆಯಾಗುವುದು ಶತಃಸಿದ್ಧ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಲೋಕಸಭಾ ಉಪ ಚುನಾವಣೆಯ ಪ್ರಚಾರಾರ್ಥವಾಗಿ ಗುರುವಾರ ಹಿರೇಬಾಗೇವಾಡಿ, ಕಂಗ್ರಾಳಿ ಕೆ ಎಚ್ ಮೊದಲಾದ ಗ್ರಾಮಗಳಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸತೀಶಣ್ಣಾ ಜಾರಕಿಹೊಳಿಯವರ ಪರ ಮತ ಯಾಚಿಸಿ ಅವರು ಮಾತನಾಡಿದರು.
ಕಳೆದ ಮೂವತ್ತು ವರ್ಷಗಳಿಂದ ರಾಜಕೀಯ ಜೀವನದಲ್ಲಿ ತೊಡಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಕೈಗೊಂಡು ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಬಲ ಸೂಚಿಸುವ ಮೂಲಕ ಲೋಕಸಭೆಗೆ ಆಯ್ಕೆ ಮಾಡಿ ಎಂದು ಮತದಾರರಲ್ಲಿ ವಿನಂತಿಸಿದ ಅವರು, ಎಲ್ಲ ಕಡೆ ಜನರಲ್ಲಿ ಕಾಂಗ್ರೆಸ್ ಪರ ಉತ್ಸಾಹ ಕಂಡು ಬರುತ್ತಿದೆ. ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚು ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೆಬ್ಬಾಳಕರ್ ಹೇಳಿದರು.
ಬೆಳಗಾವಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯೇ ಕಾಂಗ್ರೆಸ್ ಪಕ್ಷದ ಮೂಲ ಗುರಿಯಾಗಿದೆ. ಕಾಂಗ್ರೆಸ್ ಪಕ್ಷ ಬಡವರ, ಶ್ರಮಿಕರ ಹಾಗೂ ರೈತರ ಪಕ್ಷವಾಗಿದ್ದು, ಲಕ್ಷಾಂತರ ರೂ.ಗಳ ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ಬದುಕಿನಲ್ಲಿ ಹಾಸುಹೊಕ್ಕಾಗಿದೆ., ಇಂತಹ ಪಕ್ಷಕ್ಕೆ ನಾವೆಲ್ಲರೂ ಬೆಂಬಲ ನೀಡುವ ಮೂಲಕ ಸತೀಶ್ ಜಾರಕಿಹೊಳಿ ಅವರನ್ನು ಪ್ರಚಂಡ ಬಹುಮತಗಳಿಂದ ಆರಿಸಿ ತರೋಣ ಎಂದರು.