ನವದೆಹಲಿ: ಇಂದು ಬೆಳಿಗ್ಗೆ 11 ಗಂಟೆಗೆ ಅತ್ಯಂತ ಹೆಚ್ಚು ಕೊರೋನಾ ಪ್ರಕರಣಗಳಿರುವ ಕರ್ನಾಟಕ, ಬಿಹಾರ, ತಮಿಳುನಾಡು, ಅಸ್ಸಾಂ, ಚಂಡೀಗಢ, ಉತ್ತರಖಂಡ, ಮಧ್ಯಪ್ರದೇಶ, ಗೋವಾ, ಹಿಮಾಚಲ ಪ್ರದೇಶ, ದೆಹಲಿ ರಾಜ್ಯಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಲಿದ್ದಾರೆ. ಇದಲ್ಲದೆ ಮೇ 20 ರಂದು ಉಳಿದ ರಾಜ್ಯಗಳ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸಿದೆ. ಪ್ರತಿ ದಿನ ಮೂರು ಲಕ್ಷದಷ್ಟು ಜನ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದಾರೆ. ಪ್ರತಿ ದಿನ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಕೊರೋನಾದಿಂದ ಸಾಯುತ್ತಿದ್ದಾರೆ. ಇಷ್ಟಾದರೂ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅಗತ್ಯ ಇರುವಷ್ಟು ಕೊರೋನಾ ಲಸಿಕೆ ಪೂರೈಕೆ ಮಾಡುತ್ತಿಲ್ಲ. ಇದರಿಂದ ಮೂರನೇ ಹಂತದ ಕೊರೋನಾ ಲಸಿಕೆ ಹಾಕುವ ಕಾರ್ಯಕ್ರಮ ವಿಫಲವಾಗಿದೆ. ಇನ್ನೊಂದೆಡೆ ಆಮ್ಲಜನಕದ ಸಮಸ್ಯೆ ಆಕಾಶದೆತ್ತರಕ್ಕೆ ಬೆಳೆದು ನಿಂತಿದೆ. ಈ ಎಲ್ಲಾ ಸಮಸ್ಯೆಗಳ ನಡುವೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.