ಕಾರವಾರ: ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಸಭೆಗೆ ಬರುತ್ತಿದ್ದ ಅಧಿಕಾರಿಗಳ ಕಾರು ಪಲ್ಟಿಯಾಗಿ ಓರ್ವ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ. ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಬಾಳೆಗುಳಿ ಬಳಿ ಈ ಅಪಘಾತ ಸಂಭವಿಸಿದ್ದು ಸಿದ್ದಾಪುರ ಲೋಕೋಪಯೋಗಿ ಇಲಾಖೆಯ ಎಇಇ ಆಗಿದ್ದ 58 ವರ್ಷದ ಮುದುಕಣ್ಣನವರ್ ಮೃತ ಅಧಿಕಾರಿಯಾಗಿದ್ದಾರೆ.
ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿಂದು ಕಾರವಾರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಕೊರೊನಾ ಹಾಗೂ ನೆರೆ ಸಂಬಂಧ ಅಧಿಕಾರಿಗಳ ಸಭೆ ಆಯೋಜಿಸಲಾಗಿತ್ತು. ಈ ಸಭೆಗೆ ಹಾಜರಾಗಲು ಶಿರಸಿ, ಸಿದ್ದಾಪುರ ಹಾಗೂ ಮುಂಡಗೋಡ ತಾಲೂಕಿನ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ಗಳು ಒಂದೇ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಬಾಳೆಗುಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ರಸ್ತೆ ಪಕ್ಕದ ದಿಬ್ಬಕ್ಕೆ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಓರ್ವ ಅಧಿಕಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಕಾರಿನಲ್ಲಿದ್ದ ಇನ್ನೂ ನಾಲ್ವರ ಪೈಕಿ ಓರ್ವ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸದ್ಯ ಗಾಯಾಳುಗಳನ್ನ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗುತ್ತಿದ್ದು ಸ್ಥಳಕ್ಕೆ ಅಂಕೋಲಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.