ಬೆಂಗಳೂರು: ಸತತ ಹದಿಮೂರು ದಿನಗಳಿಂದ ಏರಿಕೆ ಆಗ್ತಿರೋ ತೈಲ ಬೆಲೆ ಏರಿಕೆ ವಿರುದ್ಧ ಸರಣಿ ಟ್ವೀಟ್ ಮೂಲಕ ಕೇಂದ್ರ, ರಾಜ್ಯ ಸರ್ಕಾರವನ್ನು ತರಟೆ ತೆಗೆದುಕೊಂಡು ಬಿಜೆಪಿ ಬಡವರ ಪಕ್ಷವಲ್ಲ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲಾಲ್ ಹಾಲಾಹಲದ ನಡುವೆಯೇ ಇವತ್ತು ಮುಂಜಾನೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ. ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ ಹದಿಮೂರು ದಿನಗಳಲ್ಲಿ ಎಂಟು ರೂಪಾಯಿ ಜಿಗಿತ. ಇದಪ್ಪಾ ಬಹುಜನ ಹಿತಾಯ, ಬಹುಜನ ಸುಖಾಯ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್ ಎಂದು ಲೇವಡಿ ಮಾಡಿದ್ದಾರೆ.
ಹದಿಮೂರು ದಿನದಿಂದ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿದೆ. 2 ತೈಲಗಳ ಬೆಲೆ ಎಂಟು ರೂಪಾಯಿ ಹೆಚ್ಚಳ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 108.99 ರೂ. ಇಂದಿನ ಹೆಚ್ಚಳ: 88 ಪೈಸೆ ಡೀಸೆಲ್ ಬೆಲೆ ಲೀಟರಿಗೆ 92.83 ರೂ. ಇಂದಿನ ಹೆಚ್ಚಳ: 78 ಪೈಸೆ ಜಿಗಿದಿದೆ. ಖಜಾನೆ ಭರ್ತಿಗೆ ಷೇರು ಸೂಚ್ಯಂಕವನ್ನು ಕುಣಿಸಿದಂತೆ, ಬೆಲೆ ಸೂಚ್ಯಂಕದ ಕರಡಿ ಕುಣಿತವೂ ಭರ್ಜರಿ ಎಂದು ಕುಮಾರ್ ಸ್ವಾಮಿ ಕಿಡಿಕಾರಿದ್ರು. 2018ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಸಾಲ ಮನ್ನಾಕ್ಕಾಗಿ ಪೆಟ್ರೋಲ್ ಲೀಟರಿಗೆ 1.12 ಪೈಸೆ, ಹಾಗೂ ಡೀಸೆಲ್ ಬೆಲೆಯಲ್ಲಿ ಲೀಟರಿಗೆ 1.14 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ನಾಯಕರು ಕೂಗಾಡಿ ಗಲಾಟೆ ಎಬ್ಬಿಸಿದ್ರು.
ಬೆಲೆ ಹೆಚ್ಚಳದ ಈ ಹಣ ರೈತರಿಗೆ ಹೋಗಿಬಿಡುತ್ತದಲ್ಲ ಎಂದು ಅವರ ಹೊಟ್ಟೆ ಉರಿದುಹೋಯ್ತು ಎಂದು ಎಚ್.ಡಿ.ಕುಮಾರಸ್ವಾಮಿ ಗುಡುಗಿದರು. ಹಾದಿಬೀದಿಯಲ್ಲಿ ಖಾಲಿ ಸಿಲಿಂಡರ್ಗಳನ್ನು ಹೊತ್ತ ಬಿಜೆಪಿಗರು ಈಗೇಕೆ ಮೌನಕ್ಕೆ ಶರಣಗಾಗಿದ್ದಾರೆ? ಬೆಲೆ ಏರಿಕೆಯಿಂದ ಬಡವರ ಹೊಟ್ಟೆ ಉರಿದರೆ ನಿಮಗೆ ಖುಷಿಯಾ. ಬನ್ನಿ, ಬೀದಿಗೆ ಬಂದು ಪ್ರತಿಭಟನೆ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಎಂದು ಕರೆ ನೀಡಿದ್ರು.
ಸಿಮೆಂಟ್, ಕಬ್ಬಿಣ, ಆಹಾರ ಪದಾರ್ಥ ಸೇರಿ ಸಾಮಾನ್ಯ ವ್ಯಕ್ತಿ ಬಳಸುವ ಪ್ರತಿ ವಸ್ತುವಿನ ಬೆಲೆ ನಿತ್ಯವೂ ಜಿಗಿಯುತ್ತಿದೆ. ಶ್ರೀಸಾಮಾನ್ಯನು ಮನೆ ಕಟ್ಟುವ ಕನಸು ಇನ್ನು ಬರೀ ಕನಸೇ. ಅವನ ಜೇಬು ಖಾಲಿಯಾಗುತ್ತಿದೆ, ಕೆಲವರ ಜೇಬು ತುಂಬುತ್ತಿದೆ. ಬಿಜೆಪಿ ಭಾರತದಲ್ಲಿ ಉದ್ಯಮಿಗಳು ಜಗತ್ತಿನ ಟಾಪ್ ಶ್ರೀಮಂತರಾಗುತ್ತಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದ್ರು.
ಹಿಜಾಬ್, ಕೇಸರಿ ಶಾಲು, ಟಿಪ್ಪು ಪಠ್ಯ, ಮುಸ್ಲಿಂ ವರ್ತಕರಿಗೆ ನಿಷೇಧ, ಹಲಾಲ್ ಕಟ್ ಬಗ್ಗೆ ಅಬ್ಬರಿಸಿ ಬೊಬ್ಬಿರಿಯುವ ಶ್ರೀಮಂತರ ಪಕ್ಷ ಬಿಜೆಪಿಯು ಬೆಲೆ ಏರಿಕೆ ಬಗ್ಗೆ ಮಾತ್ರ ಮೌನವಾಗಿದೆ. ರಾಜ್ಯ ಸರ್ಕಾರವೂ ಮೌನ. ಮುಖ್ಯಮಂತ್ರಿಗಳೂ ಮೌನ. ಮೌನಂ ಶರಣಂ ಗಚ್ಛಾಮಿ. ಮೌನಿ ಪಕ್ಷ. ಮೌನಿ ಸರ್ಕಾರ. ಮೌನಿ ಮುಖ್ಯಮಂತ್ರಿ ಎಂದು ವ್ಯಂಗ್ಯವಾಡಿದ್ರು.
ಬೆಲೆ ಏರಿಕೆ ಬಗ್ಗೆ ಜನರ ಆಕ್ರೋಶ ಎಲ್ಲಿ ಸ್ಫೋಟಗೊಂಡು ಬಿಜೆಪಿ ಬುಡಕ್ಕೆಲ್ಲಿ ಬೆಂಕಿ ಬೀಳುತ್ತದೋ ಎಂಬ ಭಯದಿಂದ ಆ ಮುಗ್ಧಜನರ ಮನಸ್ಸನ್ನು ಸೂಕ್ಷ್ಮ ವಿಷಯಗಳ ಕಡೆ ಹೊರಳುವಂತೆ ಮಾಡಲಾಗಿದೆ. 150 ಸೀಟಿನ ರೋಡ್ ಮ್ಯಾಪ್ ಎಲ್ಲಿ ಮಣ್ಣು ಪಾಲಾಗುತ್ತದೋ? ಎಂದು ಹಿಂದುತ್ವದ ವಿನಾಶಕ್ಕೆ ಹಿಂಸಾಚಾರದ ಶಂಖ ಊದಲಾಗಿದೆ ಎಂದು ವಾಗ್ದಾಳಿ ನಡೆಸಿದ್ರು.
ಘನವೇತ್ತ ಮಾಜಿ ಮುಖ್ಯಮಂತ್ರಿ ಮಾಜಿ ಕೇಂದ್ರ ಮಂತ್ರಿಗಳೂ ಡಿ.ವಿ.ಸದಾನಂದಗೌಡರು, ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರ್ಕಾರ ಕಾರಣ ಎಂದಿದ್ದಾರೆ. ಎಂಟು ವರ್ಷವಾದರೂ ಯುಪಿಎ ಮಾಡಿದ ತಪ್ಪು ಸರಿ ಮಾಡಲಿಲ್ಲ, ಏಕೆ ಅಡುಗೆ ಮನೆಗಳಲ್ಲಿ ತಾಯಂದಿರು, ಬೆಲೆ ಏರಿಕೆ ಬೆಂಕಿಯಲ್ಲಿ ಬೇಯುತ್ತಿದ್ದರೆ ನಿಮಗೆ ರಾಜಕೀಯ ಮುಖ್ಯವಾಗಿದೆ.
ನಾಚಿಕೆಯಾಗಬೇಕು ಎಂದು ಟೀಕಿಸಿದರು. ಬಿಜೆಪಿ ಎಂದರೆ ಭಾರತೀಯ ಜನತಾ ಪಕ್ಷವಲ್ಲ, ಬಡವರ ರಕ್ತಹೀರಿ ಸಿರಿವಂತರ ಖಜಾನೆ ಭರ್ತಿ ಮಾಡುವ ಬಲ್ಲಿದ ಜನರ ಪಕ್ಷ. ಬೆಲೆ ಶೂಲದಿಂದ ಬಡಜನರನ್ನು ಬರ್ಬಾದ್ ಮಾಡುತ್ತಿರುವ ಪಕ್ಷ. ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಬಡವರ ಪಕ್ಷವಲ್ಲ ಬಿಜೆಪಿ ಎಂದು ಕಿಡಿಕಾರಿದ್ರು.