ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಯ ಟೆಂಡರ್ನಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಬೇಕೆಂಬ ವಿರೋಧ ಪಕ್ಷಗಳ ಆಗ್ರಹವನ್ನು ತಳ್ಳಿಹಾಕಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳೇ ವಾಸ್ತವ ಅಂಶವನ್ನು ತಿಳಿಸಿದ್ದಾರೆ. ಸತ್ಯಾಸತ್ಯತೆ ಗೊತ್ತಾದ ಬಳಿಕ ತನಿಖೆಯ ಅಗತ್ಯವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಈ ಹಿಂದಿನ ಸರ್ಕಾರಗಳ ಅವಧಿಯಲ್ಲಿ ಟೆಂಡರ್ಗೆ ಯಾವ ಪದ್ಧತಿಗಳನ್ನು ಅನುಸರಿಸಲಾಗುತ್ತಿತ್ತೋ ಈಗಲೂ ಅದೇ ಪ್ರಕಾರ ನಡೆಯುತ್ತಿದೆ. ಕೆಟಿಟಿಪಿ ಕಾಯ್ದೆ ಪ್ರಕಾರವೇ ಟೆಂಡರ್ ಪ್ರಕ್ರಿಯೆ ನಡೆದಿದೆ. ಎಲ್ಲವೂ ಪಾರದರ್ಶಕವಾಗಿದೆ. ವಿರೋಧ ಪಕ್ಷಗಳು ಆರೋಪ ಮಾಡುವುದು ಸಹಜ ಎಂದು ತಿರುಗೇಟು ನೀಡಿದ್ದಾರೆ. ಇದೇ ವೇಳೆ ಅರವಿಂದ ಬೆಲ್ಲದ್ ಅವರ ದೂರವಾಣಿ ಕದ್ದಾಲಿಕೆ ಆರೋಪ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ‘ದೂರವಾಣಿ ಕರೆ ಕದ್ದಾಲಿಕೆ ಆಗುತ್ತಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಆರೋಪ ಮಾಡಿದ್ದು, ಪ್ರಕರಣವನ್ನು ತನಿಖೆಗೆ ವಹಿಸಲಾಗಿದೆ. ಬೆಲ್ಲದ್ ಜೊತೆ ತನಿಖಾಧಿಕಾರಿ ಚರ್ಚಿಸಿ ಮಾಹಿತಿ ಪಡೆದಿದ್ದಾರೆ’ ಎಂದು ತಿಳಿಸಿದ್ದಾರೆ. ಭದ್ರಾ ಮೇಲ್ಡಂಡೆ ಯೋಜನೆಯ ಕಾಮಗಾರಿಯ ಟೆಂಡರ್ನಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ ಆರೋಪಿಸಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಆಗ್ರಹಿಸುತ್ತಿದ್ದಾರೆ.