ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತ ನಡುವೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರ ಪಪ್ಪಿ, ರಘುರಾಮರೆಡ್ಡಿ ಮತ್ತು ಇತರರ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಮತದಾನ ಮುಕ್ತಾಯವಾಗುವ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ತಿಪ್ಪಾರೆಡ್ಡಿ ಕಾರಿನಲ್ಲಿ ಮತದಾನ ಕೇಂದ್ರದ ಕಾಂಪೌಂಡ್ ಒಳಗೆ ಬಂದಿದ್ದಾರೆ. ಇದಕ್ಕೆ ಕಾಂಗ್ರೆಸ್ ಅಭ್ಯರ್ಥಿ ವೀರೇಂದ್ರ ಪಪ್ಪಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಸಿದ್ದಾಪುರದ ನಾಗರಾಜ್ ಎಂಬವರು ಗಲಾಟೆ ಬಿಡಿಸಲು ಹೋದಾಗ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿ, ಜಾತಿನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ನಾಗರಾಜ್, ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರ ಪಪ್ಪಿ, ರಘುರಾಮರೆಡ್ಡಿ ಮತ್ತು ಇತರರ ವಿರುದ್ಧ ದೂರು ದಾಖಲಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ ಚಿತ್ರದುರ್ಗದ ಹೆಚ್.ಅಂಜಿನಪ್ಪ ಎಂಬುವರು ಬಿಜೆಪಿ ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿ, ಪುತ್ರ ಡಾ.ಸಿದ್ಧಾರ್ಥ ವಿರುದ್ದ ಪ್ರತಿದೂರು ದಾಖಲಿಸಿದ್ದಾರೆ. ಜಿ.ಹೆಚ್.ತಿಪ್ಪಾರೆಡ್ಡಿ ಕುಡಿದ ಅಮಲಿನಲ್ಲಿ ಗಲಾಟೆ ಮಾಡುತ್ತಿದ್ದರು. ಬಿಡಿಸಲು ಹೋದದ್ದಕ್ಕೆ ಜಾತಿ ನಿಂದನೆ, ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.