ಬೆಳಗಾವಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 146 ಕೋಟಿ ರೂಪಾಯಿಗಳ ಅಂದಾಜು ಮೊತ್ತಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಇನ್ನು ಅಥಣಿ ಮತಕ್ಷೇತ್ರದಲ್ಲಿ ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ಪಶುವೈದ್ಯಕೀಯ ಮಹಾವಿದ್ಯಾಲಯದ ಮೂರನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಶ್ಯ ಇರುವ 36 ಕೋಟಿ ರೂಪಾಯಿಗಳ ಹೆಚ್ಚುವರಿ ಮೊತ್ತಕ್ಕೆ ಇಂದು ಸಚಿವ ಸಂಪುಟದ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಇದರ ಜೊತೆಯಲ್ಲಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ರೂ 110 ಕೋಟಿ ರೂಪಾಯಿಗಳ ಅಂದಾಜು ಮೊತ್ತದಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಇಂದಿನ ಸಚಿವ ಸಂಪುಟದ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದೆ ಇದರಿಂದಾಗಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣ ಕಾಮಗಾರಿ ಕೂಡಲೇ ಕೈಗೆತ್ತಿಕೊಂಡು ಕಾಮಗಾರಿಯನ್ನು ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.