ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿಯನ ಶಾರದೆ ಖ್ಯಾತಿಯ ಜಯಂತಿ ವಿಧಿವಶರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅನಾರೋಗ್ಯ ದಿಂದ ಬಳಲುತ್ತಿದ್ದ ಜಯಂತಿ ಅವರು ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಜೇನುಗೂಡು ಚಿತ್ರದ ಮೂಲಕ ಸ್ಯಾಂಡಲ್‌ವುಡ್ ಗೆ ಎಂಟ್ರಿ ಕೊಟ್ಟಿದ್ದ ಜಯಂತಿ, 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅದ್ರಲ್ಲೂ ಡಾ.ರಾಜ್ ಕುಮಾರ್ ಅವರ ಜೊತೆ ಸುಮಾರು 45 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸುವ ಮೂಲಕ ಬಹುಖ್ಯಾತಿಯನ್ನು ಪಡೆದುಕೊಂಡಿದ್ದಾರೆ. ಅಭಿನಯ ಶಾರದೆ ಎಂದೇ ಖ್ಯಾತರಾಗಿದ್ದ ಜಯಂತಿ ಕನ್ನಡ ಮಾತ್ರವಲ್ಲದೇ ತೆಲಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಬಳ್ಳಾರಿಯಲ್ಲಿ1950 ರಲ್ಲಿ ಜನಿಸಿದ ಜಯಂತಿ ಅವರ ಬಾಲ್ಯದ ಹೆಸರು ಕಮಲಾ ಕುಮಾರಿ. ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ನಂತರ ಜಯಂತಿ ಎಂದು ಹೆಸರನ್ನು ಬದಲಾಯಿಸಿಕೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಅವರು ಇದೀಗ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.