ಕೂಗು ನಿಮ್ಮದು ಧ್ವನಿ ನಮ್ಮದು

ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ; ಬಿಜೆಪಿ ಹೈಕಮಾಂಡ್ಗೆ ಟಿಕೆಟ್ ನೀಡಬೇಡಿ ಎಂದು ಮನವಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ಬಿಜೆಪಿಯ ಹಿರಿಯ ನಾಯಕರೂ ಆಗಿರುವ ಕೆಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, ತಾನು ಸ್ವಯಂ ನಿವೃತ್ತಿ ಘೋಷಣೆ ಮಾಡುತ್ತಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಕ್ಷೇತ್ರಕ್ಕೆ ನನ್ನ ಹೆಸರನ್ನು ಪರಿಗಣಸದಂತೆ ಮನವಿ ಮಾಡಿಕೊಂಡಿದ್ದಾರೆ. “ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ನಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಕೆ.ಎಸ್.ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನೀಡಿದ ನಿವೃತ್ತಿ ಘೋಷಣೆ ಪತ್ರವನ್ನು ಇ-ಮೇಲ್ ಮೂಲಕ ಜೆ.ಪಿ.ನಡ್ಡಾಗೆ ಕಳುಹಿಸಿದ್ದಾರೆ. ಸದ್ಯ ಈಶ್ವರಪ್ಪ ಅವರು ಶಿವಮೊಗ್ಗದ ನಿವಾಸದಲ್ಲೇ ಇದ್ದು, ಯಾವುದೇ ಹೇಳಿಕೆಯನ್ನು ನೀಡಿಲ್ಲ.

ರಾಜ್ಯ ಬಿಜೆಪಿಯಲ್ಲಿ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿಯೂ ಆಗಿರುವ ಸದ್ಯ ಕೇಂದ್ರ ಬಿಜೆಪಿ ಚುನಾವಣಾ ಸಮಿತಿ ಸದಸ್ಯರಾಗಿರುವ ಬಿಎಸ್ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು. ವಿಧಾನಸಭೆ ಅಧಿವೇಶನದ ವೇಳೆ ವಿದಾಯ ಭಾಷಣ ಕೂಡ ಮಾಡಿದ್ದರು. ಅದಾಗ್ಯೂ, ತಾನು ಚುನಾವಣೆಯಲ್ಲಿ ಮಾತ್ರ ಸ್ಪರ್ಧಿಸುವುದಿಲ್ಲ. ರಾಜಕೀಯದಿಂದ ನಿವೃತ್ತಿ ಹೊಂದುತ್ತಿಲ್ಲ. ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇನೆ ಅಂತ ಹೇಳಿದ್ದರು.

ಇದಾದ ನಂತರ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. ಮುಂದೆ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಜನರಿಗೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ, ಮಾಜಿ ಸಚಿವ ಎಸ್​ಎ ರವೀಂದ್ರನಾಥ್ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದರು. ಆರೋಗ್ಯ ಸರಿಯಿಲ್ಲದ ಕಾರಣಕ್ಕೆ ನಾನೇ ಚುನಾವಣೆಯಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದರು.

ಇತ್ತೀಚೆಗೆ ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆ ಉತ್ತರಕ್ಕೆ ಎಸ್​​.ಎ. ರವೀಂದ್ರನಾಥ್​ ಅಭ್ಯರ್ಥಿ ಎಂದು ಹೇಳಿದ್ದರು. ನನಗೆ ಟಿಕೆಟ್​ ಬೇಡ, ಕುಟುಂಬಸ್ಥರಿಗೂ ಬೇಡ. ಹೊಸಬರಿಗೆ ಅವಕಾಶ ಕೊಡಿ ಎಂದು ರವೀಂದ್ರನಾಥ್ ಹೇಳಿದ್ದರು. ಯಡಿಯೂರಪ್ಪ ಅವರು ಸ್ವಯಂ ನಿವೃತ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಅವರಾದ ಬಳಿಕ ಹಿರಿಯ ಅಂದರೆ ನಾನೇ ಇರೋದು. ಹಾಗಾಗಿ ನಾನು ಕೂಡ ನಿವೃತ್ತಿ ಘೋಷಣ ಮಾಡಿಕೊಂಡಿದ್ದೇನೆ. ಪಕ್ಷ ಯಾರಿಗೆ ಟಿಕೆಟ್​ ನೀಡುತ್ತದೆ ಅವರನ್ನು ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದರು.

error: Content is protected !!