ಕೂಗು ನಿಮ್ಮದು ಧ್ವನಿ ನಮ್ಮದು

ಯುದ್ಧ ವಿಮಾನ ದುರಂತ: ಪೈಲಟ್ ಹನುಮಂತರಾವ್ ಸಾರಥಿಗೆ ಗಣ್ಯರ ಅಂತಿಮ‌ ನಮನ

ಬೆಳಗಾವಿ, ಜ.29(ಕರ್ನಾಟಕ ವಾರ್ತೆ): ಗ್ವಾಲಿಯರ್ ಸಮೀಪ ನಡೆದ ವಾಯುಪಡೆಯ ಯುದ್ಧ ವಿಮಾನಗಳ ಪತನ ವೇಳೆ ಹುತಾತ್ಮರಾದ ಪೈಲಟ್, ವಿಂಗ್ ಕಮಾಂಡರ್‌ ಬೆಳಗಾವಿಯ ಗಣೇಶಪುರದ ಹನುಮಂತರಾವ್ ರೇವಣಸಿದ್ದಪ್ಪ ಸಾರಥಿ ಅವರಿಗೆ ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಯೋಧನ ಪಾರ್ಥೀವ ಶರೀರವನ್ನು ಸೇನೆಯ‌ ವಿಶೇಷ ವಿಮಾನದ ಮೂಲಕ ಭಾನುವಾರ(ಜ.29) ಮಧ್ಯಾಹ್ನ 12.30 ಗಂಟೆಗೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತರಲಾಯಿತು.

ಈ ಸಂದರ್ಭದಲ್ಲಿ ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ.ದರ್ಶನ್, ಮತ್ತಿತರ ಗಣ್ಯರು ಪುಷ್ಪಗುಚ್ಛ ಸಮರ್ಪಿಸಿ ಅಂತಿಮ ನಮನ ಸಲ್ಲಿಸಿದರು.

ಜಿಲ್ಲಾಧಿಕಾರಿ ಪಾಟೀಲ ಅವರಿಂದ ಶ್ರದ್ಧಾಂಜಲಿ:

ಗ್ವಾಲಿಯರ್ ನಲ್ಲಿ ತರಬೇತಿ ಕಾರ್ಯಾಚರಣೆಯಲ್ಲಿದ್ದ ಯುದ್ಧ ವಿಮಾನ ಪತನದಿಂದ ಬೆಳಗಾವಿಯ ವಿಂಗ್ ಕಮಾಂಡರ್ ಶ್ರೀ ಹನುಮಂತರಾವ್ ಸಾರಥಿ ಅವರು ನಿಧನರಾದ ವಿಷಯ ತಿಳಿದು ತುಂಬ ದುಃಖವಾಯಿತು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಂತಾಪ ವ್ಯಕ್ತಪಡಿಸಿದರು.

ಹೆಮ್ಮೆಯ ಯೋಧ ಹನುಮಂತರಾವನನ್ನು ಕಳೆದುಕೊಂಡಿದ್ದು ದೇಶಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬದ ದುಃಖದಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ

ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರಿಗೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಜಿಲ್ಲಾಧಿಕಾರಿ ಪಾಟೀಲ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


error: Content is protected !!