ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಮಾರ್ಚ್ 17 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ. ಜಯಪುರ, ಬಾಳೆಹೊನ್ನೂರು, ಜಾನ್ಮನೆ, ಸುಂಟಿಕೊಪ್ಪ, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಕಲಬುರಗಿಯಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 13.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 49 ಗಂಟೆಗಳಲ್ಲಿ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು,ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಾರ್ಚ್ 19ರವರೆಗೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಕಲುಬುರಗಿಯಲ್ಲಿ ಅತ್ಯಧಿಕ ತಾಪಮಾನ ಕಂಡು ಬಂದಿದೆ. ಗರಿಷ್ಠ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಯಚೂರಲ್ಲಿ ಗರಿಷ್ಠ 36.4 ಡಿಗ್ರಿ ಸೆಲ್ಸಿಯಸ್, ಬಳ್ಳಾರಿಯಲ್ಲಿ 36 ಡಿಗ್ರಿ ಸೆಲ್ಸಿಯಸ್, ಶಿರಾಲಿಯಲ್ಲಿ 35 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.