ಕೂಗು ನಿಮ್ಮದು ಧ್ವನಿ ನಮ್ಮದು

ಕರ್ನಾಟಕ ವಿಧಾನಸಭೆಗೆ ಚುನಾವಣಾ ದಿನಾಂಕ ಪ್ರಕಟ, ಮೇ. ಹತ್ತರಂದು ಮತದಾನ, ಮೇ. ಹದಿಮೂರಕ್ಕೆ ಫಲಿತಾಂಶ

ನವದೆಹಲಿ/ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ. ಇಂದು(ಮಾರ್ಚ್ 29) ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ. ಇನ್ನು ಈಗಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು. ಏಪ್ರಿಲ್ 13 ರಂದು ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 12 ರಂದು ನಾಮಪತ್ರ ಪರಿಶೀಲನೆ ನಡೆಸಲಾಗುವುದು, ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿರುತ್ತದೆ, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಮೇ 13 ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

ರಾಜ್ಯದಲ್ಲಿ 5,21,73,579 ಜನ ಮತದಾರರಿದ್ದಾರೆ. 2,62,42,561 ಜನ ಪುರುಷ ಮತದಾರರು ಹಾಗೂ 2,59,26,319 ಮಹಿಳಾ ಮತದಾರರಿದ್ದಾರೆ. 80 ವರ್ಷ ಮೇಲ್ಪಟ್ಟವರು 12,15,763 ಜನ ಇದ್ದಾರೆ. 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. 9,17,241 ಮಂದಿ ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 4,699 ತೃತೀಯ ಲಿಂಗಿ ಮತದಾರರಿದ್ದಾರೆ. 17 ವರ್ಷ ಮೇಲ್ಪಟ್ಟವರು 1,25,406 ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಇತ್ತೀಚೆಗೆ ರಾಜ್ಯ ವಿಧಾನಸಭೆ ಚುನಾವಣೆಯ ಸಿದ್ಧತೆ ಪರಿಶೀಲನೆಗಾಗಿ ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮಾಹಿತಿ ನೀಡಿದರು.

ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳು ಇರಲಿವೆ. ಒಂದು ಮತಗಟ್ಟೆಯಲ್ಲಿ 883 ಜನ ಮತ ಹಾಕಬಹುದಾಗಿದೆ. ನಗರ ಪ್ರದೇಶಗಳಲ್ಲಿ 24,063 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 34,219 ಮತಗಟ್ಟೆಗಳು ಇರಲಿವೆ. ಹಾಗೇ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಲಾಗುವುದು. ಅಂಗವಿಕಲರಿಗೆ ವ್ಹೀಲ್ಚೇರ್ ವ್ಯವಸ್ಥೆ ಇರಲಿದೆ. ಅಭ್ಯರ್ಥಿಗಳು ಸುವಿಧಾ ಮೂಲಕವೂ ನಾಮಪತ್ರ ಸಲ್ಲಿಸಬಹುದು.

ಅಫಿಡವಿಟ್ ಕೂಡ ಸಲ್ಲಿಕೆ ಮಾಡಬಹುದು. ಅಪರಾಧ ಪ್ರಕರಣಗಳು ಇದ್ದರೆ ಮೂರು ಬೇರೆ ಬೇರೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಿರಬೇಕು. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪೇಪರ್ ಕಟ್ಟಿಂಗ್ ಕೂಡ ಅಪ್ಲೋಡ್ ಮಾಡಬೇಕು. ಸಭೆ, ಸಮಾರಂಭ ಮಾಡುವುದಕ್ಕೂ ಆನ್ಲೈನ್ ಮೂಲಕವೇ ಮನವಿ ಸಲ್ಲಿಸಬಹುದು ಎಂದು ಇತ್ತೀಚೆಗೆ ರಾಜೀವ್ ಕುಮಾರ್ ಹೇಳಿದ್ದಾರೆ

error: Content is protected !!