ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬೆಳಗಾವಿ ಜಿಲ್ಲೆಯಾಧ್ಯಂತ ಈಗಾಗಲೇ ಬೈಲಹೊಂಗಲ, ಗೋಕಾಕ,ಬೆಳಗಾವಿ, ಕುಡಚಿ, ರಾಯಭಾಗ ಮತ್ತು ಕಾಗವಾಡ ಸೇರಿದಂತೆ ಹಲವೆಡೆ ಭೇಟಿ ನೀಡಿ ಕೊರೊನಾ ಸೊಂಕಿತರು ಮತ್ತು ವೈದ್ಯರಿಂದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇವೆ. ಸಮಸ್ಯೆಗಳನ್ನು ಸರ್ಕಾರದ ಮುಂದಿಡಲಿದ್ದೇವೆ ಎಂದರಲ್ಲದೆ ತೈಲ ಬೆಲೆ ಏರಿಕೆಯ ಶತಕ ದಾಟುತ್ತಿದೆ ಆ ಕಾರಣದಿಂದ ಬಡವರು, ರೈತರು ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ತಿವ್ರ ತೊಂದರೆಯಾಗುತ್ತಿದ್ದು ಇಂದು ತಾಲೂಕು ಮಟ್ಟಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ ಸರ್ಕಾರ ಈ ಬಗ್ಗೆ ಕೂಡಲೇ ಸ್ಪಂದಿಸಿ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು. ರಾಜ್ಯದ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಕಾಂಗ್ರೆಸ್ ಪಕ್ಷ ಇದನ್ನು ಯಾವುದೇ ರೀತಿ ಎನ್ ಕ್ಯಾಶ್ ಮಾಡಿಕೊಳ್ಳುವದಿಲ್ಲ. ಯಡ್ಯೂರಪ್ಪನವರೇ ಮುಂದಿನ ಎರಡು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಮುಂದುವರೆಯಲಿ ಎಂದು ಆಶಿಸುತ್ತೇನೆ ಎನ್ನುವ ಮೂಲಕ ಬಿಜೆಪಿ ನಾಯಕರ ಬಂಡಾಯದ ಬಗ್ಗೆ ಕುಟುಕಿದರು.