ಬೆಂಗಳೂರು: ಮಂಡ್ಯದಲ್ಲಿ ಟಿಪ್ಪು ಸುಲ್ತಾನ್ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ ಎಂದು ಸಚಿವ ಅಶ್ವಥ್ ನಾರಾಯಣ ಸ್ಪಷ್ಟನೆ ನೀಡಿದ್ದಾರೆ. ಹೇಳಿಕೆಯು ಭಾರೀ ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಸಚಿವರು ಟ್ವೀಟ್ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು ಸಿದ್ದರಾಮಯ್ಯ ಅವರ ಸಂಸ್ಕೃತಿ ಆಗಿರಬಹುದು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತು ಆಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ ಎಂದು ಸಚಿವರು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಸಾಂದರ್ಭಿಕವಾಗಿ ಆಡು ಭಾಷೆಯಲ್ಲಿ ಸೋಲಿಸಿ ಎಂಬ ಅರ್ಥದಲ್ಲಿ ಹೇಳಿರುವ ಮಾತನ್ನು ತಮಗೆ ಬೇಕಾದ ಹಾಗೆ ಅರ್ಥೈಸಿಕೊಂಡು, ಮಾತನಾಡುತ್ತಿರುವ ಸಿದ್ದರಾಮಯ್ಯ ಅವರ ಭಾಷಾ ಪ್ರಾವೀಣ್ಯತೆ, ಅವರು ಬಳಸುವ (ಗ್ರಾಮೀಣ!) ಪದಗಳು ಏನೆಂಬುದನ್ನು ರಾಜ್ಯದ ಜನತೆಯೇ ನೋಡಿದೆ. ಅಷ್ಟಕ್ಕೂ, ಟಿಪ್ಪುವಿನಲ್ಲಿರುವ ಕಟುಕತನದ ಮನಸ್ಥಿತಿ ನಮ್ಮ ಮಂಡ್ಯದ ಜನತೆಗೆ ಇಲ್ಲ’ ಎಂದು ಅಶ್ವಥ್ ನಾರಾಯಣ ಉಲ್ಲೇಖಿಸಿದ್ದಾರೆ.
ಅಶ್ವಥ್ ನಾರಾಯಣ ವಿರುದ್ದ ದೂರು ದಾಖಲು
ಈ ಮಧ್ಯೆ, ಸಚಿವ ಅಶ್ವಥ್ ನಾರಾಯಣ ವಿರುದ್ದ ಕೊಲೆ ಯತ್ನ ಪ್ರಕರಣ ದಾಖಲಿಸಬೇಕು ಎಂದು ಮಲ್ಲೇಶ್ವರಂ ಪೊಲೀಸ್ ಸ್ಟೇಷನ್ಗೆ ಕಾಂಗ್ರೆಸ್ ಮುಖಂಡರು ದೂರು ಸಲ್ಲಿಸಿದ್ದಾರೆ. ಕಾಂಗ್ರೆಸ್ ಮುಖಂಡ ಮನೋಹರ್ ಹಾಗೂ ಇತರರು ದೂರು ಸಲ್ಲಿಸಿದ್ದಾರೆ.
ಅಶ್ವಥ್ ನಾರಾಯಣ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಆತ ಮನುಷ್ಯನೋ ರಾಕ್ಷಸನೋ ನೀವೇ ತಿಳಿದುಕೊಳ್ಳಿ. ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದವರನ್ನು ಬೆಂಬಲಿಸುವ ಪಕ್ಷದ ಅಶ್ವತ್ಥ್ ನಾರಾಯಣ ಅವರಿಂದ ಇಂಥ ಹೇಳಿಕೆ ಮೂಡಿಬಂದಿರುವುದರಿಂದ ಅಚ್ಚರಿಯಿಲ್ಲ. ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ಸಚಿವರ ವಿರುದ್ಧ ಈವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಅವರ ಸರ್ಕಾರ ನಿದ್ರಿಸುತ್ತಿದೆ. ಅಶ್ವತ್ಥ್ ನಾರಾಯಣ ಮಾನಸಿಕ ಅಸ್ವಸ್ಥನಾಗಿದ್ದಾನೆ ಎಂದು ಏಕವಚನದಲ್ಲಿ ಟ್ವೀಟ್ ಮಾಡಿದ್ದರು.
‘ಕಾಂಗ್ರೆಸ್ನ ಟಿಪ್ಪುವನ್ನು ವಿಜೃಂಭಿಸುತ್ತಿದ್ದಾರೆ’
ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ನಾನು ಇಂಥ ಹೇಳಿಕೆ ನೀಡಿದ್ದೆ ಎಂದು ವಿಧಾನಸೌಧದ ಆವರಣದಲ್ಲಿ ಅಶ್ವಥ್ ನಾರಾಯಣ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದವರು ಟಿಪ್ಪು ಸುಲ್ತಾನ್ನನ್ನು ವಿಜೃಂಭಿಸುತ್ತಿದ್ದಾರೆ. ರಾಜಕೀಯ ಹಾಗೂ ಸೈದ್ಧಾಂತಿಕವಾಗಿ ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸುತ್ತಿದ್ದೇವೆಯೇ ವಿನಃ ನಾವು ಯಾವುದೇ ಯುದ್ಧದ ಕಾಲದಲ್ಲಿಲ್ಲ. ಚುನಾವಣೆ ಎಂಬ ಯುದ್ಧದಲ್ಲಿ ನಾವು ಗೆಲ್ಲಬೇಕು ಅಂತ ಆ ರೀತಿಯ ಹೇಳಿಕೆ ನೀಡಿದ್ದೇನೆ ಹೇಳಿದ್ದೇನೆ. ವೈಯಕ್ತಿಕವಾಗಿ ಸಿದ್ದರಾಮಯ್ಯ ಮೇಲೆ ನನಗೆ ಯಾವುದೇ ದ್ವೇಷ ಇಲ್ಲ. ಒಂದು ವೇಳೆ ಸಿದ್ದರಾಮಯ್ಯ ಮನಸ್ಸಿಗೆ ನೋವಾದ್ದರೆ ವಿಷಾದಿಸುತ್ತೇನೆ. ಆದರೆ, ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂಬುದನ್ನು ಗಮನಿಸಬೇಕು. ಜಾತಿ, ಧರ್ಮ ಆಧಾರಿತವಾಗಿ ಸಮಾಜ ಒಡೆಯುವ ಕೆಲಸ ನಾನು ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
ಬಿಜೆಪಿ ಸಂಸ್ಕೃತಿಯನ್ನು ತೋರಿಸಿದೆ; ಎಚ್ಡಿಕೆ
‘ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯನನ್ನು ಹೊಡೆದು ಹಾಕೋಣ’ ಎಂದು ಅಶ್ವಥ್ ನಾರಾಯಣ ಹೇಳಿರುವುದು ಅವರ ಸಂಸ್ಕೃತಿಯನ್ನು ತೋರಿಸಿಕೊಟ್ಟಿದೆ. ಅವರ ಹೃದಯದಲ್ಲಿರುವ ಮಾತು ಹೊರ ಬಂದಿದೆ ಎಂದು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ಸಾಹದಲ್ಲಿ ಮಾತನಾಡುವಾಗ ಕೆಲವೊಂದು ಸಲ ಸತ್ಯಗಳು ಹೊರ ಬರುತ್ತವೆ. ಬಿಜೆಪಿಯವರ ಸಿದ್ಧಾಂತ ಬೇರೆ, ಅವರ ಮನಸ್ಸಿನಲ್ಲಿರೋದೆ ಬೇರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.