ಬೆಂಗಳೂರು: ರಂಭಾಪುರಿ ಪೀಠದಲ್ಲಿ ನಡೆಯುತ್ತಿರುವ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಇಂದು ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಹಾಗೂ ರೇಣುಕಾಚಾರ್ಯ ಜಯಂತಿ ನಡೆಯಲಿದೆ. ಭಾನುವಾರ ಬೆಳಿಗ್ಗೆ 11ಕ್ಕೆ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶ್ರೀ ಪೀಠದ ಪ್ರತಿಷ್ಠಿತ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿದ ಗಣ್ಯರಿಗೆ ಗೌರವ ಗುರುರಕ್ಷೆ ನೀಡಲಾಗುವುದು. ಸಮಾರಂಭಕ್ಕೂ ಮುನ್ನ ಶ್ರೀಪೀಠದಲ್ಲಿ ನಿರ್ಮಾಣಗೊಳ್ಳಲಿರುವ 51ಅಡಿ ಎತ್ತರ ದ ರೇಣುಕಾಚಾರ್ಯ ಮಂಗಲಮೂರ್ತಿಗೆ ಶಿಲಾನ್ಯಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ. ಇಲ್ಲಿನ ಮೂಲಪೀಠದ ನವೀಕರಣ ಶಿಲಾನ್ಯಾಸವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರವೇರಿಸಲಿದ್ದಾರೆ. ಶ್ರೀ ಪೀಠದ ಮುಂಭಾಗ ನಿರ್ಮಾಣ ಮಾಡಿರುವ ನೂತನ ಕಾಂಕ್ರೀಟ್ ರಸ್ತೆಯನ್ನು ಸಚಿವ ಸಿ.ಸಿ.ಪಾಟೀಲ ಉದ್ಘಾಟಿಸಲಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ರಂಭಾಪುರಿ ಬೆಳಗು ಕೃತಿ ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಸಮಾರಂಭದ ನಂತರ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ರಾತ್ರಿ 8.30ಕ್ಕೆ ಗದಗದ ಗುರುಸ್ವಾಮಿ ಕಲಕೇರಿ ಅವರಿಂದ ಗಾನ ತರಂಗ ಭಕ್ತಿಗೀತೆ ಕಾರ್ಯಕ್ರಮ ನಡೆಯಲಿದೆ