ಕೂಗು ನಿಮ್ಮದು ಧ್ವನಿ ನಮ್ಮದು

ಗಂಗಾ ಕಲ್ಯಾಣ ಯೋಜನೆಯಲ್ಲಿ ಭ್ರಷ್ಟಾಚಾರ, ಆರೋಪಿ ವಿರುದ್ಧ ಕ್ರಮಕೈಗೊಳ್ಳದ ಸರ್ಕಾರ

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯ ಪಂಪ್‌ಗಳ ಅಳವಡಿಕೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕವಿತಾ ಎಂ.ವಾರಂಗಲ್ ವಿರುದ್ಧ ಕ್ರಮ ಕೈಗೊಳ್ಳಲು ಸರಕಾರ ಮೀನಾಮೇಷ ಎಣಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಕವಿತಾ ಅವರ ವಿರುದ್ಧ ಲೋಕಾಯುಕ್ತರು ಸರಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕವಿತಾ ಎಂ.ವಾರಂಗಲ್ ಅವರು ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತರು ಫೆಬ್ರವರಿ 7ರಂದೇ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ವರದಿ ಸಲ್ಲಿಸಿದ್ದಾರೆ. ಕವಿತಾ ಅವರನ್ನು ವ್ಯವಸ್ಥಾಪಕ ನಿರ್ದೇಶಕಿ ಹುದ್ದೆಯಲ್ಲೇ ಮುಂದುವರಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

8 ಲಕ್ಷ ನಗದು ಚಿನ್ನ ವಶಕ್ಕೆ
ಗಂಗಾ ಕಲ್ಯಾಣ ಯೋಜನೆಯ ಪಂಪ್ ಅಳವಡಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಸುಳಿವು ಆಧರಿಸಿ ಲೋಕಾಯುಕ್ತ ಪೊಲೀಸರು 2022ರ ಡಿಸೆಂಬರ್ 17ರಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೇಂದ್ರ ಕಚೇರಿ ಸೇರಿದಂತೆ ಐದು ಸ್ಥಳಗಳ ಮೇಲೆ ದಾಳಿ ನಡೆಸಿ, 8 ಲಕ್ಷ ನಗದು, ಚಿನ್ನಾಭರಣ, ಅಪಾರ ಪ್ರಮಾಣದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಆದೇಶಿಸಿದ್ದರು.


ನಿವಾಸ ಕಚೇರಿಗಳ ಮೇಲೆ ದಾಳಿ
ನಗರದ ವಸಂತ ನಗರದಲ್ಲಿರುವ ವಾಲ್ಮೀಕಿ ಅಭಿವೃದ್ದಿ ನಿಗಮದ ಕೇಂದ್ರ ಕಚೇರಿ, ವ್ಯವಸ್ಥಾಪಕ ನಿರ್ದೇಶಕಿ ಕವಿತಾ ಎಂ.ವಾರಂಗಲ್ ಅವರ ಬೆಂಗಳೂರಿನ ನಿವಾಸ, ರಾಣೆಬೆನ್ನೂರಿನಲ್ಲಿರುವ ಮನೆ, ನಿಗಮದ ಧಾರವಾಡ ಜಿಲ್ಲಾಕಚೇರಿ ಹಾಗೂ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಟೊಳಲಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿತ್ತು.
ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳ ಜಮೀನುಗಳಲ್ಲಿ ಕೊರೆದಿರುವ ಕೊಳವೆ ಬಾವಿಗಳಿಗೆ ಸಬ್‌ಮರ್ಸಿಬಲ್‌ ಪಂಪ್ ಅಳವಡಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಯೋಜನೆಯಲ್ಲಿ ಭಾರಿ ಪ್ರಮಾಣದ ಅವ್ಯವಹಾರ ನಡೆಯುತ್ತಿರುವ ಕುರಿತು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ಕಡತಗಳನ್ನು ವಶಪಡಿಸಿಕೊಂಡಿದ್ದರು.


ಮತ್ತೆ ಅದೇ ಹುದ್ದೆಗೆ ಮರಳಿದ ಕವಿತಾ
ಲೋಕಾಯುಕ್ತ ದಾಳಿ ಬೆನ್ನಲ್ಲೇ ಕವಿತಾ ಎಂ.ವಾರಂಗಲ್ ಅವರನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲಾಗಿತ್ತು. ಆದರೆ, ಅವರು ಪ್ರಭಾವ ಬಳಸಿ ತಿಂಗಳು ಕಳೆಯುವಷ್ಟರಲ್ಲಿ ಮತ್ತೆ ಅದೇ ಹುದ್ದೆಗೆ ಮರಳಿದರು. ಲೋಕಾಯುಕ್ತ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ವರದಿ ಸಲ್ಲಿಸಿದ್ದು, ಕವಿತಾ ಅವರು ಕರ್ತವ್ಯ ಲೋಪವೆಸಗಿರುವುದು ಕಂಡುಬಂದಿದೆ. ಆದಾಗ್ಯೂ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಅವರನ್ನು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯಲ್ಲೇ ಮುಂದುವರಿಸಿರುವುದರಿಂದ ಸಾಕ್ಷ್ಯ ನಾಶಪಡಿಸುವ ಸಾಧ್ಯತೆಗಳಿವೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ದೂರಿದರು. ಬೊಮ್ಮಾಯಿ ಭ್ರಷ್ಟಾಚಾರದ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವಹಿಸುತ್ತೇನೆ: ಸಿಎಂ ಬೊಮ್ಮಾಯಿ

error: Content is protected !!