ಬೆಂಗಳೂರು: ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಮಳೆಯಿಂದ ಆಗುವ ಅನಾಹುತ ತಡೆಯಲು ಕ್ರಮ ಕೈಗೊಳ್ಳಲಾಗುವುದು. ಮುಳುಗಡೆಯಾಗುವ ಸ್ಥಳಗಳನ್ನು ಈಗಾಗಲೇ ಗುರುತಿಸಿಸಲಾಗಿದ್ದು, ನದಿ ಪಾತ್ರದ ಜನತೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುವುದು. 20 ಜಿಲ್ಲೆಗಳ ಡಿಸಿ, ಜಿಲ್ಲಾ ಉಸ್ತುವಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾಹಿತಿ ಪಡೆಯಲಾಗಿದೆ. ಕೇಂದ್ರ ಸರ್ಕಾರ ಎಲ್ಲಾ ನೆರವು ನೀಡುವುದಾಗಿ ಘೋಷಿಸಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ಈ ವರ್ಷ ಮುಂಗಾರು ಬೇಗ ಆರಂಭ ಆಗಿದೆ. ಕೆರೆ ಕಟ್ಟೆಗಳು ತುಂಬುವ ಹಂತದಲ್ಲಿವೆ. ಬಿತ್ತನೆ ಕಾರ್ಯ ಆಗುತ್ತಿದೆ. ಮುಂದಾಗುವ ಅನಾಹುತಗಳ ತಪ್ಪಿಸುವಂತೆ ಎಚ್ಚರಿಕೆ ನೀಡಿದ್ದೇವೆ. ಮುಳುಗಡೆ ಪ್ರದೇಶದಲ್ಲಿರುವವರನ್ನು ಸ್ಥಳಾಂತರ ಮಾಡೋಕೆ ಸೂಚಿಸಿದ್ದೇನೆ. ಎನ್‌ಡಿಆರ್‌ಎಫ್, ಹೆಲಿಕಾಪ್ಟರ್ ವ್ಯವಸ್ಥೆಯನ್ನು ಮಾಡಿ ಕೊಟ್ಟಿರುವ ಪ್ರಧಾನಿಯವರಿಗೆ ಧನ್ಯವಾದ ತಿಳಿಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಜಿಲ್ಲೆ ಮತ್ತು ತಾಲ್ಲೂಕು ಮಟ್ಟಗಳಲ್ಲಿ ಸಹಾಯವಾಣಿ ಸ್ಥಾಪನೆ, ದೂರವಾಣಿ ಮತ್ತಿತರ ಸಂಪರ್ಕ ಸಾಧನಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಬೇಕು. ತುರ್ತು ನಿರ್ವಹಣೆಗೆ ಬೇಕಾದ ಸಾಮಗ್ರಿಗಳನ್ನು ಅಗತ್ಯಕ್ಕೆ ಅನುಗುಣವಾಗಿ ಖರೀದಿಸಲು ಕ್ರಮ ಕೈಗೊಳ್ಳಬೇಕು. ಅಗತ್ಯ ಮೂಲಸೌಕರ್ಯಗಳುಳ್ಳ ಕಾಳಜಿ ಕೇಂದ್ರಗಳು, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರವಾಹ ನಿರ್ವಹಣೆಗಾಗಿ ಸ್ಥಳೀಯ ಸಂಪನ್ಮೂಲಗಳ ಸದ್ಬಳಕೆ ಹಾಗೂ ಸ್ಥಳೀಯ ಸಂಘ–ಸಂಸ್ಥೆಗಳು, ಸ್ವಯಂ ಸೇವಕರ ಸಹಕಾರವನ್ನು ಪಡೆದುಕೊಳ್ಳಬೇಕು. ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪ್ರವಾಹದ ಪರಿಣಾಮ ಅತ್ಯಂತ ಕಡಿಮೆಯಾಗುವಂತೆ ಕಾರ್ಯ ನಿರ್ವಹಿಸಬೇಕು
ಪ್ರವಾಹದ ಹಿನ್ನೆಲೆಯಲ್ಲಿ ಸ್ಥಳಾಂತರಿಸಿದ ಕೆಲವು ಗ್ರಾಮಗಳಿಗೆ ಗ್ರಾಮಸ್ಥರು ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಈ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಈ ಗ್ರಾಮಗಳಿಗೆ ಮೂಲಸೌಕರ್ಯ ಒದಗಿಸಿ, ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಜಿಲ್ಲಾಡಳಿತಗಳ ಜತೆಗಿನ ಸಭೆಯಲ್ಲಿ ಸೂಚನೆ ನೀಡಿದರು.
ಎರಡನೇ ಹಂತದ ಅನ್ ಲಾಕ್ ವಿಚಾರವಾಗಿ ಇಂದಿನ ಸಭೆಯಲ್ಲಿ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು. ಯಾವುದಕ್ಕೆಲ್ಲಾ ವಿನಾಯಿತಿ ಕೊಡಬೇಕು ಎಂದು ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಅವರು ತಿಳಿಸಿದರು.