ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ ಬೆಂಗಳೂರಿನ ಭಗವಾನ್ ಶ್ರೀ ಮಾರುತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಸಂದರ್ಭದಲ್ಲಿ ಮುಂದಿನ ಕೆಲಸ ಕಾರ್ಯಗಳೆಲ್ಲವೂ ಸಾಂಗವಾಗಿ ನೆರವೇರಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸಂಪುಟ ಸಭೆ: ದೇವಸ್ಥಾನಕ್ಕೆ ಭೇಟಿ ನೀಡುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ಇವತ್ತು ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ನಾನೊಬ್ಬನೇ ಪ್ರತಿಜ್ಞಾ ವಿಧಿ ಸ್ವೀಕರಿಸುತ್ತೇನೆ. ಅದಕ್ಕೂ ಮುನ್ನ ರಾಜ್ಯ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗುತ್ತೇನೆ. ಅವರ ಬಳಿ ಎಲ್ಲಾ ವಿಷಯಗಳನ್ನು ಚರ್ಚಿಸಿ ಪ್ರತಿಜ್ಞಾ ವಿಧಿ ಸಮಾರಂಭ ಮುಗಿದ ಮೇಲೆ ಸಣ್ಣ ಸಂಪುಟ ಮಾಡಿ ಚರ್ಚಿಸುತ್ತೇನೆ, ನಂತರ ಹಿರಿಯ ಅಧಿಕಾರಿಗಳ ಬಳಿ ಚರ್ಚೆ, ಸಮಾಲೋಚನೆ ನಡೆಸಿ ಕೋವಿಡ್ ಪರಿಸ್ಥಿತಿ, ಮಳೆಯಿಂದ ಆಗಿರುವ ಹಾನಿ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು.
ತಕ್ಷಣದಲ್ಲಿ ರಾಜ್ಯದಲ್ಲಿ ಏನು ಕೆಲಸವಾಗಬೇಕು ಎಂದು ಮನಗಂಡು ಆ ನಿಟ್ಟಿನೆಡೆಗೆ ಕಾರ್ಯಪ್ರವೃತ್ತವಾಗುತ್ತೇನೆ. ರಾಜ್ಯಕ್ಕೆ ಉತ್ತಮ ಆಡಳಿತ ನೀಡುವತ್ತ ಗಮನ ಹರಿಸುತ್ತೇನೆ ಎಂದರು. ಸಾಯಂಕಾಲ ಬಿಜೆಪಿ ಕಚೇರಿಗೆ ತೆರಳುತ್ತೇನೆ ಎಂದು ಮಾಹಿತಿ ನೀಡಿದರು.
ಅವರ ಜೊತೆ ಬಿಜೆಪಿಯ ಕೆಲವು ನಾಯಕರು ಹಾಜರಿದ್ದರು. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಬೊಮ್ಮಾಯಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಭವನದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಸಿಎಂ ಆಗಿ ಇಂದು ಬೊಮ್ಮಾಯಿ ಪ್ರಮಾಣವಚನ ಹಿನ್ನೆಲೆ ರಾಜಭವನದ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದ್ದು, ಡಿಸಿಪಿ, ಎಸಿಪಿ ಸೇರಿ 500ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.