ನರೇಗಾ ಯೋಜನೆಯಡಿ 84 ಕೆರೆಗಳ ಅಭಿವೃದ್ಧಿ,
ಬೆಳಗಾವಿ: ಆಡಳಿತವನ್ನು ಚುರುಕುಗೊಳಿಸಿ ಅಭಿವೃದ್ಧಿ ಕಾರ್ಯಗಳ ವೇಗ ಹೆಚ್ಚಿಸಬೇಕು ಎಂಬುದು ಮುಖ್ಯಮಂತ್ರಿಗಳ ಆಶಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಹಾಗೂ ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರಕಾರ ಹಾಗೂ ಆಡಳಿತ ವರ್ಗದ ಮೇಲೆ ಜನರು ಇಟ್ಟಿರುವ ನಿರೀಕ್ಷೆಗೆ ಅನುಗುಣವಾಗಿ ಎಲ್ಲ ಇಲಾಖೆಯ ಅಧಿಕಾರಿಗಳು ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸಬೇಕು.
ಯಾವುದೇ ಯೋಜನೆ, ಕಾಮಗಾರಿ, ಕಡತಗಳನ್ನು ಬಾಕಿ ಇಟ್ಟುಕೊಳ್ಳಬಾರದು. ಎಲ್ಲ ಇಲಾಖೆ ಹಾಗೂ ಅಧಿಕಾರಿಗಳು ಒಟ್ಟಾಗಿ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಜಿಲ್ಲೆಗೆ ಕೀರ್ತಿ ಸಾಧ್ಯವಾಗಲಿದೆ. ಜನಸಂಖ್ಯೆ ಮತ್ತು ಗಾತ್ರದ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯು ಪ್ರಮುಖ ಜಿಲ್ಲೆಯಾಗಿರುವುದರಿಂದ ಇಲ್ಲಿನ ಪ್ರಗತಿಯು ಒಟ್ಟಾರೆ ರಾಜ್ಯದ ಪ್ರಗತಿಗೆ ಪೂರಕವಾಗಲಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಸರಕಾರದ ಯೋಜನೆಗಳು ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಕುಂಠಿತಗೊಳ್ಳಬಾರದು. ಜಿಲ್ಲಾಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಾಲ್ಲೂಕು ಕಚೇರಿಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪ್ರಗತಿಯನ್ನು ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
“ಸಕಾಲ” ಬಾಕಿ ಅರ್ಜಿ ಇತ್ಯರ್ಥಕ್ಕೆ ಸೂಚನೆ:
ಸಕಾಲದಲ್ಲಿ ಹದಿನೈದು ಸಾವಿರಕ್ಕೂ ಅಧಿಕ ಅರ್ಜಿಗಳು ಬಾಕಿ ಉಳಿದಿವೆ. ಮುಂಬರುವ ದಿನಗಳಲ್ಲಿ ಯಾವುದೇ ಇಲಾಖೆಯಲ್ಲಿ ಒಂದೇ ಒಂದು ಅರ್ಜಿಗಳು ಬಾಕಿ ಉಳಿಯಬಾರದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲ್ಲೂಕು ಕಚೇರಿಗಳಿಗೆ ಭೇಟಿ ನೀಡುವುದರ ಜತೆಗೆ ನಿಯಮಿತವಾಗಿ ಪ್ರಗತಿ ಪರಿಶೀಲಿಸಬೇಕು. ಅದೇ ರೀತಿ ಫಲಾನುಭವಿ ಆಧಾರಿತ ಕಾರ್ಯಕ್ರಮ ಅನುಷ್ಠಾನ ಕುರಿತು ಪರಿಶೀಲಿಸಬೇಕು. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಿಸಲಾದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಅನುಷ್ಠಾನ ಪ್ರಕ್ರಿಯೆ ಈಗಾಗಲೇ ಚುರುಕಿನಿಂದ ಆರಂಭಗೊಂಡಿದೆ.
ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ನೀಡಿದ ಪ್ರತಿಯೊಂದು ಸೂಚನೆಗಳನ್ನು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ತಿಳಿಸಲಾಯಿತು.
ಹೊಸದಾಗಿ ಕಸಾಯಿಖಾನೆ ಸ್ಥಾಪನೆಗೆ ಅನುಮತಿ ನೀಡುವಾಗ ಯಾವುದೇ ಕಾರಣಕ್ಕೂ ವಿಮಾನ ನಿಲ್ದಾಣದ ಸಮೀಪ ಅವಕಾಶ ನೀಡಬಾರದು.
ಈಗಾಗಲೇ ಇರುವ ಮಾಂಸ ಮಾರಾಟ ಅಂಗಡಿಗಳು ತ್ಯಾಜ್ಯವನ್ನು ವ್ಯವಸ್ಥಿತವಾಗಿ ನಡೆಯುವಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಾಟೀಲ ತಿಳಿಸಿದರು.
ಪ್ರಸಕ್ತ ಸಾಲಿನಲ್ಲಿ ಕೈಗೊಳ್ಳಬೇಕಾಗಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ಸೇರಿದಂತೆ ಎಲ್ಲ ಕೆಲಸಗಳನ್ನು ನಿಗದಿತ ಕಾಲಮಿತಿಯಲ್ಲಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು.
ಜಲಜೀವನ ಮಿಷನ್, ಸ್ವಚ್ಛ ಭಾರತ ಮಿಷನ್ ಮತ್ತಿತರ ಪ್ರಮುಖ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಎಂದರು.
ನರೇಗಾ ಯೋಜನೆಯಡಿ 84 ಕೆರೆಗಳ ಅಭಿವೃದ್ಧಿ:
ಜಿಲ್ಲೆಯ ಒಟ್ಟು 84 ಕೆರೆಗಳ ಅಭಿವೃದ್ಧಿ ಕಾಮಗಾರಿ ಸಮರ್ಪಕವಾಗಿ ಜಾರಿಗೊಳಿಸಬೇಕಾದರೆ ಮೊದಲು ಕೆರೆಗಳ ಅತಿಕ್ರಮಣವನ್ನು ತೆರವುಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ತಹಶೀಲ್ದಾರರು ಮುತುವರ್ಜಿ ವಹಿಸಬೇಕು ಎಂದು ಜಿಪಂ ಸಿಇಓ ದರ್ಶನ್ ಹೇಳಿದರು.
ಅಭಿವೃದ್ಧಿಗಾಗಿ ಜಿಲ್ಲೆಯಲ್ಲಿ ಈ ಬಾರಿ 84 ಕೆರೆಗಳನ್ನು ಎಲ್ಲ 18 ವಿಧಾನಸಭಾ ಮತಕ್ಷೇತ್ರಗಳಿಂದ ತಲಾ ಐದು ಕೆರೆಗಳನ್ನು ಗುರುತಿಸಿ ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಈ ಕೆರೆಗಳನ್ನು ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಿ ಮಾದರಿ ಕೆರೆಯನ್ನಾಗಿ ರೂಪಿಸಲಾಗುವುದು.
ಕೆರೆಯ ಸುತ್ತಲೂ ಸೂಕ್ತ ಬೇಲಿಯನ್ನು ಹಾಕಿ ವಾಕಿಂಗ್ ಪಥ ನಿರ್ಮಿಸಿದರೆ ಮುಂಬರುವ ದಿನಗಳಲ್ಲಿ ಕೆರೆಗಳ ಅತಿಕ್ರಮಣವನ್ನು ತಡೆಗಟ್ಟಬಹುದು ಎಂದು ಹೇಳಿದರು.
ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಲಕ್ಷ್ಯ ಹಾಗೂ ಕಾಯಕಲ್ಪ ಯೋಜನೆಗಳನ್ನು ಸರಕಾರದ ಮಾರ್ಗಸೂಚಿ ಪ್ರಕಾರ ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಕಾರ್ಡುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ವಿತರಿಸಬೇಕು. ಕೋವಿಡ್ ತಪಾಸಣಾ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಬೇಕು ಎಂದು ತಿಳಿಸಿದರು.
ಸರಕಾರದ ಆಶಯದಂತೆ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಎಲ್ಲರೂ ಒಂದು ತಂಡವಾಗಿ ಕೆಲಸ ಮಾಡುವ ಮೂಲಕ ಸರಕಾರಕ್ಕೆ ಹೆಸರು ತರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.