ಕೂಗು ನಿಮ್ಮದು ಧ್ವನಿ ನಮ್ಮದು

ಪಂಚಮಸಾಲಿ ಪ್ರವರ್ಗ 2ಎ ಮೀಸಲಾತಿ: ನಿಷ್ಪಕ್ಷಪಾತ ವರದಿ ನೀಡುತ್ತೇನೆ- ಜಯಪ್ರಕಾಶ್ ಹೆಗ್ಡೆ

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಬೇಕು, ಸೇರಿಸಬಾರದು ಎಂಬುದರ ವಿಚಾರವಾಗಿ ಈಗಾಗಲೇ ಪರ – ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಮಗ್ರ ಅಧ್ಯಯನ ನಡೆಸಿ ನಿಷ್ಪಕ್ಷಪಾತ ವರದಿಯನ್ನು ಸಲ್ಲಿಸಲಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಗೆ ಅವರು ಭರವಸೆ ನೀಡಿದ್ದಾರೆ.

ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2 ಎ ಗೆ ಸೇರಿಸಬಾರದು. ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಕರ್ನಾಟಕದ 70 ಜಾತಿ – ಉಪ ಜಾತಿಗಳನ್ನು ಸೇರ್ಪಡೆಗೊಳಿಸಬೇಕು ಮತ್ತು ಸ್ಥಳೀಯ ಚುನಾವಣೆಗಳಲ್ಲಿ ಅತಿ ಹಿಂದುಳಿದ ವರ್ಗಗಳಿಗೂ ಮೀಸಲಾತಿ ನೀಡಬೇಕು ಹಾಗೂ ಹೆಚ್. ಕಾಂತರಾಜ ವರದಿಯನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ, ಕರ್ನಾಟಕ ರಾಜ್ಯ ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಮನವಿ ಸಲ್ಲಿಸಲಾಯ್ತು.

ಮನವಿ ಸ್ವೀಕರಿಸಿ ಮಾತನಾಡಿದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಗೆ ಅವರು, ಪ್ರವರ್ಗ 2 ಎಗೆ ಪಂಚಮಸಾಲಿ ಸಮುದಾಯವನ್ನು ಸೇರಿಸುವ ವರದಿಯನ್ನು ಈಗಾಗಲೇ ತಿರಸ್ಕರಿಸಲಾಗಿದೆ. ಈ ಬಗ್ಗೆ ಮತ್ತೆ ಪರ ವಿರೋಧ ಮಾತುಗಳು ಕೇಳಿಬರುತ್ತಿವೆ. ಎರಡು ಬಣಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಪಾರದರ್ಶಕ ವರದಿಯನ್ನು ನೀಡುವುದಾಗಿ ಹೇಳಿದ್ರು.

ಇನ್ನು ಕರ್ನಾಟಕ ರಾಜ್ಯ ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಮ್. ಸಿ. ವೇಣುಗೋಪಾಲ್ ಮಾತನಾಡಿ, ಹಿಂದುಳಿದ ವರ್ಗಗಳ ಕೇಂದ್ರ ಸರ್ಕಾರದ ಮೀಸಲಾತಿ ಪಟ್ಟಿಗೆ ಕರ್ನಾಟಕದ 70 ಜಾತಿ- ಉಪಜಾತಿಗಳನ್ನು ಸೇರಿಸಬೇಕು ಮತ್ತು ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಬಾರದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದ್ದೇವೆ. ಆಯೋಗದ ಅಧ್ಯಕ್ಷರು ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಅಲ್ಲದೆ ಅತೀ ಹಿಂದುಳಿದ ವರ್ಗಗಳಿಗೆ ಸೂಕ್ತ ನ್ಯಾಯ ನೀಡುವ ಭರವಸೆಯನ್ನು ನೀಡಿದ್ದಾರೆ ಎಂದರು.

ಪಂಚಮಸಾಲಿ ಸಮುದಾಯವು ವೀರಶೈವ-ಲಿಂಗಾಯಿತದ ಉಪಜಾತಿಯಾಗಿರುವುದರಿಂದ ಅಂತಹ ಉಪಜಾತಿಯನ್ನು ಮುಖ್ಯಜಾತಿಯಿಂದ ಬೇರ್ಪಡಿಸಿ ಬೇರೊಂದು ಪ್ರವರ್ಗಕ್ಕೆ ವರ್ಗಾಯಿಸುವುದು ಸರ್ವೋಚ್ಛ ನ್ಯಾಯಲಯ ಇಂದ್ರಾ ಸಹಾನಿ ಪ್ರಕರಣದಲ್ಲಿ ನೀಡಿರುವ ತೀರ್ಪಿಗೆ ವಿರುದ್ಧವಾಗಿರುತ್ತದೆ ಎಂದರು.

ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸುವುದು ಸರಿಯಲ್ಲ. ಇದ್ರಿಂದ ಅತೀ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ. ಒಂದು ವೇಳೆ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಿದ್ರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಮ್. ಸಿ. ವೇಣುಗೋಪಾಲ್ ಹೇಳಿದ್ರು.

1992ರ ಮಂಡಲ್ ಆಯೋಗದ ವರದಿಯಂತೆ ಕರ್ನಾಟಕದ 323 ಜಾತಿ-ಉಪಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಆನಂತರದಲ್ಲಿ 283 ಜಾತಿ-ಉಪಜಾತಿಗಳನ್ನು ಮೀಸಲಾತಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಲಾಯಿತು. ಆದರೂ ಸುಮಾರು 70 ಜಾತಿ ಉಪಜಾತಿಗಳು ರಾಜ್ಯ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದ್ದರೂ, ಕೇಂದ್ರದ ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಹೀಗಾಗಿ. ಈ ವರ್ಗಗಳ ಸವಾರ್ಂಗೀಣ ಅಭಿವೃದ್ಧಿಗೆ ಅನುಕೂಲವಾಗಲು, ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಇವುಗಳನ್ನು ಸೇರಿಸಬೇಕು ಎಮ್. ಸಿ. ವೇಣುಗೋಪಾಲ್ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರು ಹಾಗೂ
ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಂ. ನಾಗರಾಜು, ಖಜಾಂಚಿ ಎಲ್.ಎ ಮಂಜುನಾಥ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

error: Content is protected !!