ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಅಖಾಡ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯನವರು ಬುಧವಾರ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಸೇರಿದಂತೆ ಮೈಸೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಆಗಮಿಸಿದ ಸಿದ್ದರಾಮಯ್ಯನವರು ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಿದ ಬಳಿಕ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ‘ವರುಣಾ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದೆ. ಭ್ರಷ್ಟಾಚಾರ ರಹಿತವಾದ, ಪಾರದರ್ಶಕ ಆಡಳಿತ ನೀಡಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯವೆಂಬುದು ನಾಡಿನ ಮತದಾರರ ಅಭಿಪ್ರಾಯ. ಭವಿಷ್ಯದ ದೊಡ್ಡ ರಾಜಕೀಯ ಬದಲಾವಣೆಗೆ ವರುಣಾದಲ್ಲಿ ಮುನ್ನುಡಿ ಬರೆದಿದ್ದೇನೆ’ ಎಂದು ಹೇಳಿದ್ದಾರೆ.
ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೂ ಮುನ್ನ ಸಿದ್ದರಾಮಯ್ಯನವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆದುಕೊಂಡರು. ಇದಲ್ಲದೇ ಹುಟ್ಟೂರು ಸಿದ್ದರಾಮನ ಹುಂಡಿಯ ಸಿದ್ದರಾಮೇಶ್ವರ ದೇವಾಲಯ ಹಾಗೂ ಶ್ರೀರಾಮ ಮಂದಿರಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಮುನ್ನ ನಂಜನಗೂಡಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಬರುವುದು ಖಚಿತವಾಗಿದ್ದು ಕ್ಷೇತ್ರದ ಅಭಿವೃದ್ಧಿಗೆ ನಮ್ಮೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದೆ’ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ