ಕೂಗು ನಿಮ್ಮದು ಧ್ವನಿ ನಮ್ಮದು

ಜುಲೈ 3ನೇ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ, ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಕೊವಿಡ್ ಲಸಿಕೆ: ಸಚಿವ ಸುರೇಶ್ ಕುಮಾರ್ ಘೋಷಣೆ

ಬೆಂಗಳೂರು: ಜುಲೈ ತಿಂಗಳ 3ನೇ ವಾರದಲ್ಲಿ ಎರಡು ದಿನಗಳ ಕಾಲ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಲಸಿಕೆ ವಿತರಿಸುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. 6,000  ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಎಲ್ಲಾ ಸಿಬ್ಬಂದಿಗೆ ಲಸಿಕೆ ವಿತರಿಸಲಾಗುವುದು. ಹೀಗಾಗಿ ಜಿಲ್ಲಾ ಉಪನಿರ್ದೇಶಕರು ಮತ್ತು ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿಗಳ ಗಮನಕ್ಕೆ ತರುವಂತೆ ಆದ್ಯತೆ ಮೇರೆಗೆ ಲಸಿಕೆ ನೀಡಲು ಸೂಚನೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ಅವಧಿ ಪ್ರಕಟಿಸಿರು ಅವರು, ಜತೆಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಮೌಲ್ಯಾಂಕನ ಅವಧಿ ವಿಸ್ತರಣೆ ಮಾಡಲಾಗಿದೆ ಎಂದೂ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಿಯು ಉಪನ್ಯಾಸಕ ಸಂಘಟನೆಗಳ ಕೋರಿಕೆ ಮೇರೆಗೆ ಪ್ರಥಮ ಪಿಯುಸಿ ಮೌಲ್ಯಾಂಕನ ಪ್ರಕ್ರಿಯೆ ಅವಧಿ ವಿಸ್ತರಣೆ ನಿರ್ಧಾರ
ಕೈಗೊಳ್ಳಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಲಾಕ್ಡೌನ್ ಪೂರ್ಣಗೊಳ್ಳುವವರೆಗೆ ವಿಸ್ತರಣೆ ಮುಂದುವರೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. SSLC ಪರೀಕ್ಷೆ ನಡೆಸುವ ಕುರಿತು  ಜೂನ್ 28ರಂದು ಜಿಲ್ಲಾಧಿಕಾರಿಗಳು, ಸಿಇಒಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಗುವುದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದರು.

error: Content is protected !!